ಜಾಮಿಯಾ ಮಿಲ್ಲಿಯಾ ವಿಶ್ವವಿದ್ಯಾಲಯದಲ್ಲಿ ಚುನಾವಣೆ ನಡೆಸಲು ನಿರ್ಧಾರ; ವಿದ್ಯಾರ್ಥಿಗಳ ಅಮಾನತು ವಾಪಸ್

0
213

ಸನ್ಮಾರ್ಗ ವಾರ್ತೆ

ದೆಹಲಿ: ಜಾಮಿಯಾ ಮಿಲ್ಲಿಯಾ ವಿಶ್ವವಿದ್ಯಾಲಯದಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳ ಅಮಾನತು ಮತ್ತು ಶೋಕಾಸ್ (ಕಾರಣ ಕೇಳಿ) ನೋಟಿಸ್‌ಗಳನ್ನು ಹಿಂಪಡೆಯಲಾಗುವುದು. ಆದರೆ, ಚುನಾವಣೆಯ ನಿಖರ ದಿನಾಂಕವನ್ನು ಘೋಷಿಸದ ಹಿನ್ನೆಲೆಯಲ್ಲಿ ಮುಷ್ಕರವನ್ನು ಮುಂದುವರಿಸಲು ವಿದ್ಯಾರ್ಥಿಗಳು ನಿರ್ಧರಿಸಿದ್ದಾರೆ.

ವಿಶ್ವವಿದ್ಯಾಲಯವು ವಿದ್ಯಾರ್ಥಿನಿಯರ ಹಾಸ್ಟೆಲ್ ಅನ್ನು ಮುಚ್ಚಲು ಮತ್ತು ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲು ಯತ್ನಿಸುತ್ತಿದೆ. ಅಧಿಕಾರಿಗಳ ಯೋಜನೆಯನ್ನು ವಿಫಲಗೊಳಿಸಿರುವ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ವಿದ್ಯಾರ್ಥಿ ಯೂನಿಯನ್ ಚುನಾವಣೆ ನಡೆಸಬೇಕೆಂದು ಆಗ್ರಹಿಸಿ ಕಳೆದ ಎರಡು ವಾರಗಳಿಂದ ವಿದ್ಯಾರ್ಥಿಗಳು ಕ್ಯಾಂಪಸ್‌ನೊಳಗೆ ಪ್ರತಿಭಟನಾ ಡೈರಾ (ಟೆಂಟ್) ಹಾಕಿ ಪ್ರತಿಭಟನೆ ನಡೆಸುತ್ತಿದ್ದರು. ಈ ಮಧ್ಯೆ, ಕೆಲವು ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹವನ್ನೂ ಕೈಗೊಂಡಿದ್ದರು. ಪ್ರತಿಭಟನಾ ಟೆಂಟ್ ಅನ್ನು ತೆರವುಗೊಳಿಸಲು ಮತ್ತು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಆವರಣದಿಂದ ಹೊರಹಾಕಲು ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿ ಆಗಮಿಸಿದ್ದು, ಆ ಪ್ರದೇಶದಲ್ಲಿ ಸಣ್ಣಪುಟ್ಟ ಘರ್ಷಣೆಗಳಿಗೆ ಕಾರಣವಾಗಿತ್ತು.

ಕ್ಯಾಂಪಸ್‌ನಿಂದ ವಿದ್ಯಾರ್ಥಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವ ಭಾಗವಾಗಿ, ವಿಶ್ವವಿದ್ಯಾಲಯವು ತರಗತಿಗಳನ್ನು ಆನ್‌ಲೈನ್ ಮೋಡ್‌ಗೆ ಸ್ಥಳಾಂತರಿಸಿದೆ. ವಿದ್ಯಾರ್ಥಿಗಳು ಮನೆಗೆ ಹಿಂತಿರುಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದು, ಮುಂದಿನ ಸೂಚನೆ ಬರುವವರೆಗೂ ಆನ್‌ಲೈನ್‌ನಲ್ಲಿ ಮಾತ್ರ ತರಗತಿಗಳು ನಡೆಯಲಿವೆ ಎಂದು ವರದಿಯಾಗಿದೆ.