ಜಾತಿಗಣತಿ ಬಗ್ಗೆ ನಿರ್ಣಯ ತೆಗೆದ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು: ನೂತನ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ

0
587

ಸನ್ಮಾರ್ಗ ವಾರ್ತೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ವರದಿಯನ್ನು ಸಮಗ್ರವಾಗಿ ಪರಿಶೀಲಿಸಿ, ಒಂದು ನಿರ್ಣಯ ತೆಗೆದುಕೊಂಡು ಸರ್ಕಾರಕ್ಕೆ ಸಲ್ಲಿಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ನೂತನ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಆಯೋಗದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡುತ್ತಾ ತಿಳಿಸಿದ್ದಾರೆ.

ಜಾತಿಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದರ ಜತೆಗೆ ಅದಕ್ಕೆ ಅಂತ್ಯ ಹಾಡಲಾಗುವುದು ಎಂದಿರುವ ಅವರು, ಆಯೋಗಕ್ಕೆ ಸದಸ್ಯರ ನೇಮಕ ಆಗಬೇಕಿದೆ. ವರದಿಯನ್ನು ನಾನು ಮೊದಲು ಅಧ್ಯಯನ ಮಾಡುತ್ತೇನೆ. ಅದರಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ದೇಶದಲ್ಲೇ ಮೊದಲ ಬಾರಿಗೆ 160 ಕೋಟಿ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ಹಿಂದಿನ ಸರ್ಕಾರಗಳ ಸಂದರ್ಭದಲ್ಲಿ ಈ ವರದಿ ಏಕೆ ಸಲ್ಲಿಕೆ ಆಗಿಲ್ಲ ಎಂಬುದು ನನಗೆ ಗೊತ್ತಿಲ್ಲ. ಆಯೋಗದ ಹಿಂದಿನ ತೀರ್ಮಾನಗಳ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ’ ಎಂದು ಹೆಗ್ಡೆ ಹೇಳಿದರು.

ನೀಟ್, ಜೆಇಇ ಪರೀಕ್ಷೆಗಳಲ್ಲಿ ಕೆಲವು ರಾಜ್ಯಗಳಲ್ಲಿ ಕೆಲವು ಸಮುದಾಯಗಳಿಗೆ ಮೀಸಲಾತಿ ಸೌಲಭ್ಯ ಇದೆ. ಅದೇ ಜಾತಿಗಳಿಗೆ ರಾಜ್ಯದಲ್ಲಿ ಮೀಸಲಾತಿ ಇಲ್ಲ. ಅದರ ಬಗ್ಗೆಯೂ ಅಧ್ಯಯನ ನಡೆಸಿ, ಅಂತಹ ಜಾತಿವಾರು ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಉದ್ದೇಶಿಸಿರುವುದಾಗಿ ಜಯಪ್ರಕಾಶ್ ಹೆಗ್ಡೆ ಹೇಳಿದರು.