ಕರ್ನಾಟಕ ರಾಜ್ಯ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಮನವಿ

0
294

ಸನ್ಮಾರ್ಗ ವಾರ್ತೆ

ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕ ರಾಜ್ಯ ಯುವ ಆಯೋಗವನ್ನು ತಕ್ಷಣವೇ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಂಡು, ಈ ಕುರಿತು ಮಾನ್ಯ ಮುಖ್ಯಮಂತ್ರಿ ಅವರಿಗೆ ಶಿಫಾರಸು ಮಾಡುವಂತೆ ಆಗ್ರಹಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರಿಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿದ ಸಂದರ್ಭದಲ್ಲಿ, ರಾಜ್ಯದ ಯುವಜನರ ಹಿತಾಸಕ್ತಿಗಳನ್ನು ಪ್ರತಿನಿಧಿಸುವ, ಅವರ ಸಮಸ್ಯೆಗಳಿಗೆ ನೀತಿ ಮಟ್ಟದಲ್ಲಿ ಸ್ಪಂದಿಸುವ ಹಾಗೂ ಯುವಜನರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳ ಅನುಷ್ಠಾನಕ್ಕೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಯುವ ಆಯೋಗದ ಸ್ಥಾಪನೆ ಅತ್ಯಂತ ಅಗತ್ಯವಾಗಿದೆ ಎಂದು ವಿವರಿಸಲಾಯಿತು.

ಅದೇ ವೇಳೆ, ರಾಜ್ಯದ ಯುವಜನರನ್ನು ಸಾಮಾಜಿಕ, ಪ್ರಜಾಸತ್ತಾತ್ಮಕ ಮತ್ತು ಅಭಿವೃದ್ಧಿಯ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಸರ್ಕಾರ ಘೋಷಿಸಿರುವ ಭಾರತ್ ಜೋಡೋ ಯುವ ಸಂಘಟನೆ ರಚನೆಯ ನಿರ್ಧಾರವನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಸ್ವಾಗತಿಸಿತು. ಇದರ ಜೊತೆಗೆ, ರಾಜ್ಯ ಯುವ ಆಯೋಗವನ್ನು ಸ್ಥಾಪಿಸಿದಲ್ಲಿ ಯುವಪರ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಯುವಜನರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸಲು ಸಹಕಾರಿಯಾಗಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ. ನಸೀಂ ಅಹ್ಮದ್, ರಾಜ್ಯ ಕಾರ್ಯದರ್ಶಿಗಳಾದ ಇಸ್ಮಾಯಿಲ್ ತೀರ್ಥಹಳ್ಳಿ, ಅಸದುಲ್ಲಾ ಖಾನ್ ಝಕಿ, ರೆಹಾನ್ ಉಡುಪಿ ಹಾಗೂ ರಾಜ್ಯ ಮಾಧ್ಯಮ ಸಂಯೋಜಕರಾದ ಇರ್ಷಾದ್ ವೇಣೂರು ಉಪಸ್ಥಿತರಿದ್ದರು.