ಸನ್ಮಾರ್ಗ ವಾರ್ತೆ
ತಿರುವನಂತಪುರಂ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ವಿವಾದ ಮತ್ತು ಗೊಂದಲಗಳ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಕೇರಳ ವಿಧಾನಸಭೆಯಲ್ಲಿ ಸೋಮವಾರ ಅಧಿಕೃತ ನಿರ್ಣಯ ಅಂಗೀಕರಿಸಲಾಗಿದೆ.
ಹಿರಿಯ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಅವರು ಈ ವಿಷಯದಲ್ಲಿ ಚುನಾವಣಾ ಆಯೋಗದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರ ಈ ಮಹತ್ವದ ಹೆಜ್ಜೆ ಇಟ್ಟಿದೆ.
ದೇಶದಲ್ಲೇ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂತಹ ನಿರ್ಣಯವೊಂದನ್ನು ರಾಜ್ಯ ವಿಧಾನಸಭೆಯೊಂದರಲ್ಲಿ ಅಂಗೀಕರಿಸಿರುವುದು ಬಹುಶಃ ಇದೇ ಮೊದಲ ಬಾರಿಯಾಗಿದೆ.
ಮುಖ್ಯಮಂತ್ರಿ ವಿ. ಡಿ. ಸತೀಶನ್ ಅವರು ಈ ನಿರ್ಣಯವನ್ನು ಸದನದಲ್ಲಿ ಮಂಡಿಸಿದರು.
“ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ. ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ಚುನಾವಣಾ ಆಯೋಗದ ನಿಷ್ಪಕ್ಷಪಾತತನದ ಬಗ್ಗೆ ಸಾರ್ವಜನಿಕರಲ್ಲಿ ಗಂಭೀರ ಅನುಮಾನಗಳು ವ್ಯಕ್ತವಾಗಿವೆ. ಈ ಪ್ರಜಾಸತ್ತಾತ್ಮಕ ವಿಚಾರಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ” ಎಂದು ನಿರ್ಣಯದಲ್ಲಿ ಪ್ರತಿಪಾದಿಸಲಾಗಿದೆ.












