ಸನ್ಮಾರ್ಗ ವಾರ್ತೆ
ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಕೇರಳದ ಡಿಜಿಪಿ ಡಾ.ಶೇಖ್ ದರ್ವೇಶ್ ಸಾಹೇಬ್, ‘ಸುಧಾರಿತ ಸ್ಫೋಟಕ ಸಾಧನ(ಐಇಡಿ) ಬಳಸಿ ಕೃತ್ಯ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ’ ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆ 9.40ರ ಸುಮಾರಿಗೆ ಕಳಮಶ್ಶೇರಿಯ ಝಮ್ರಾ ಇಂಟರ್ನ್ಯಾಷನಲ್ ಕನ್ವೆನ್ಸನ್ ಸೆಂಟರ್ನಲ್ಲಿ ಈ ಘಟನೆ ನಡೆದಿದೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. 36 ಮಂದಿ ಗಾಯಗೊಂಡಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ಕನ್ವೆನ್ಸನ್ ಸೆಂಟರ್ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಪ್ರಾಥಮಿಕ ತನಿಖೆಯಲ್ಲಿ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಬಳಸಿ ಕೃತ್ಯ ನಡೆಸಿರುವುದು ಗೊತ್ತಾಗಿದೆ. ಕೆಲವೊಂದು ಅವಶೇಷಗಳು ದೊರಕಿದ್ದು, ಪರಿಶೀಲನೆ ನಡೆಸುತ್ತಿದ್ದೇವೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ, ಕಠಿಣ ಕ್ರಮ ಕೈಗೊಳ್ಳಲಾಗುವುದು. ನಾನು ಕೂಡ ಸ್ಥಳಕ್ಕೆ ಇಂದು ಭೇಟಿ ನೀಡಲಿದ್ದೇನೆ’ ಎಂದು ಡಿಜಿಪಿ ಡಾ.ಶೇಖ್ ದರ್ವೇಶ್ ಸಾಹೇಬ್ ತಿಳಿಸಿದ್ದಾರೆ.
ಈ ಘಟನೆ ಗಂಭೀರವಾದುದು. ಹಾಗಾಗಿ, ಎಲ್ಲ ಆಯಮಾಗಳಲ್ಲೂ ತನಿಖೆ ನಡೆಸಲಿದ್ದೇವೆ. ತನಿಖೆಗೆ ಹೊಸ ತಂಡವೊಂದನ್ನು ರಚಿಸಲಾಗಿದೆ. ಇದೇ ವೇಳೆ, ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ, ದ್ವೇಷದ ಸಂದೇಶಗಳನ್ನು ಪೋಸ್ಟ್ ಮಾಡಿದ್ದು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾರು ಕೂಡ ಯಾವುದೇ ವದಂತಿಗಳನ್ನು ನಂಬಬೇಡಿ. ಜನರು ಶಾಂತಿ-ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಮುಖ್ಯಸ್ಥ ಎಚ್ಚರಿಕೆ ನೀಡಿದ್ದಾರೆ.












