ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಅಬೂಬಕರ್ ಪಲ್ಲಮಜಲು ನಿಧನ

0
527

ಸನ್ಮಾರ್ಗ ವಾರ್ತೆ

ಮಂಗಳೂರು: ಕೋವಿಡ್ ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಖಿಲ ಭಾರತ ಬ್ಯಾರಿ ಪರಿಷತ್ ಮಂಗಳೂರು ಇದರ ಅಧ್ಯಕ್ಷ ಹಾಜಿ ಕೆ.ಎಸ್. ಅಬೂಬಕ್ಕರ್ ಪಲ್ಲಮಜಲು ಶುಕ್ರವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರಿಗೆ 48 ವರ್ಷ ವಯಸ್ಸಾಗಿತ್ತು. ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರು ಕಳೆದ ಐದು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ 10ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರ ಅಂತ್ಯ ಕ್ರಿಯೆಯು ಬಿ. ಸಿ. ರೋಡು ಪಲ್ಲಮಜಲುವಿನಲ್ಲಿ ನಡೆಸಲಾಯಿತೆಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಪ್ರಸ್ತುತ ಕುತ್ತಾರ್ ಮದನಿ ನಗರದ ನಿವಾಸಿಯಾಗಿದ್ದ ಇವರು, ಬಿ. ಸಿ. ರೋಡು ಪಲ್ಲಮಜಲು ಹಯಾತುಲ್ ಇಸ್ಲಾಂ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದ ಪದಾಧಿಕಾರಿಯಾಗಿ ಹಾಗೂ ಎಮರ್ಜೆನ್ಸಿ ಹೆಲ್ಪ್ ಲೈನ್ ನಂತಹ ಹಲವು ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು.

ಇವರ ನಿಧನಕ್ಕೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ, ಮಾಜಿ ಮೇಯರ್ ಕೆ. ಅಶ್ರಫ್, ಎಮರ್ಜೆನ್ಸಿ ಹೆಲ್ಪ್ ಲೈನ್ ಬಳಗದವರು ಸಂತಾಪ ಸೂಚಿಸಿದ್ದಾರೆ.