ಲೋಕಸಭೆ ಚುನಾವಣೆ; ಬಿಜೆಪಿ ಸೋಲು ಖಚಿತ: ಸಿಎಂ ಸಿದ್ದರಾಮಯ್ಯ

0
454

ಸನ್ಮಾರ್ಗ ವಾರ್ತೆ

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಸೋಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷದ ವಿರುದ್ಧ ಹೋರಾಡಲು ಕಾರ್ಯತಂತ್ರಗಳನ್ನು ರೂಪಿಸುವುದಕ್ಕಾಗಿ ವಿರೋಧ ಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗುವುದು. ಇದು ಎರಡನೇ ಸಭೆಯಾಗಿದ್ದು, 24 ಪಕ್ಷಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ’ ಎಂದು ತಿಳಿಸಿದರು.

ಒಂದು ಪಕ್ಷದ ವಿರುದ್ಧ ಹೋರಾಡಲು ಎಲ್ಲಾ ವಿರೋಧ ಪಕ್ಷಗಳು ಒಂದಾಗುತ್ತಿವೆ ಎಂದು ಬಿಜೆಪಿ ಗೇಲಿ ಮಾಡುತ್ತಿದೆ ಎಂದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸೋಲಲಿದೆ ಎಂಬುದಕ್ಕೆ ಇತ್ತೀಚೆಗೆ ಮುಕ್ತಾಯಗೊಂಡ ಕರ್ನಾಟಕ ವಿಧಾನಸಭೆ ಚುನಾವಣೆ ಸಾಕ್ಷಿಯಾಗಿದೆ ಎಂದು ತಿರುಗೇಟು ನೀಡಿದರು.

ಚುನಾವಣಾ ಪ್ರಚಾರದ ವೇಳೆ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಯಾವೆಲ್ಲಾ ಕ್ಷೇತ್ರಕ್ಕೆ ಭೇಟಿ ನೀಡಿದ್ದರೋ ಅಲ್ಲೆಲ್ಲಾ ಬಿಜೆಪಿ ಸೋತಿದೆ. ಬಿಜೆಪಿಯ ಅವನತಿ ಕರ್ನಾಟಕದಿಂದ ಪ್ರಾರಂಭವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಸೋಲುತ್ತವೆ ಎಂದು ಪ್ರತಿಪಾದಿಸಿದರು.

ಕೇಂದ್ರ ಸರ್ಕಾರ ದೇಶದ ಆರ್ಥಿಕತೆಯನ್ನು ಕೆಡಿಸಿದ್ದು, ಬಿಜೆಪಿಯ ಕೋಮುವಾದಿ ರಾಜಕಾರಣದಿಂದ ಜನರು ಆತಂಕದಲ್ಲಿ ಬದುಕುತ್ತಿದ್ದಾರೆ ಎಂದವರು ವಾಗ್ದಾಳಿ ಮಾಡಿದರು.