ಮಧ್ಯಪ್ರದೇಶ | ನರ್ಮದಾ ನದಿಯ ದಂಡೆಯಲ್ಲಿ 340ಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿಗಳು ಪತ್ತೆ; ತನಿಖೆಗೆ ಕಾಂಗ್ರೆಸ್ ಆಗ್ರಹ

0
270

ಸನ್ಮಾರ್ಗ ವಾರ್ತೆ

ಖಾರ್ಗೋನ್‌: ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ 340ಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿವೆ. ಮಂಡಲೇಶ್ವರ ಪಟ್ಟಣದ ನರ್ಮದಾ ನದಿಯ ದಂಡೆಯಲ್ಲಿ ಈ ಗುರುತಿನ ಚೀಟಿಗಳು ಸಿಕ್ಕಿವೆ. ಈ ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ಈ ಚೀಟಿಗಳು ನೆರೆಜಿಲ್ಲೆಯ ಇಂದೋರ್ ರಾವ್ ವಿಧಾನಸಭಾ ಕ್ಷೇತ್ರದ ಜನರಿಗೆ ಸೇರಿದವು ಎಂದು ನಂಬಲಾಗಿದೆ. ನದಿ ದಂಡೆಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಸ್ಥಳೀಯರಿಗೆ ಈ ಕಾರ್ಡ್‌ಗಳು ಸಿಕ್ಕಿವೆ. ತಕ್ಷಣವೇ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೆಲವೇ ನಿಮಿಷಗಳಲ್ಲಿ, ಪತ್ತೆಯಾದ ಕಾರ್ಡ್‌ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರವಿ ನಾಯಕ್ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಮಂಡಲೇಶ್ವರ ಪೊಲೀಸ್ ಠಾಣೆಗೆ ತೆರಳಿ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ದೂರು ನೀಡಿದ್ದಾರೆ. ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಪ್ರಶ್ನಿಸಿದ ರವಿ ನಾಯಕ್, ಜವಾಬ್ದಾರರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು. ನರ್ಮದಾ ನದಿಯಲ್ಲಿ ಇನ್ನೂ ಹೆಚ್ಚಿನ ಮತದಾರರ ಗುರುತಿನ ಚೀಟಿಗಳು ಉಳಿದುಕೊಂಡಿವೆಯೇ ಎಂಬುದನ್ನು ಪತ್ತೆಹಚ್ಚಲು ಈಜುಗಾರರನ್ನು ಬಳಸಿ ಹುಡುಕಾಟ ನಡೆಸಬೇಕು ಎಂದೂ ದೂರಿನಲ್ಲಿ ತಿಳಿಸಲಾಗಿದೆ. ಎಫ್‌ಐಆರ್ ದಾಖಲಿಸದಿದ್ದರೆ ಕಾಂಗ್ರೆಸ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದೆ ಎಂದು ರವಿ ನಾಯಕ್ ಎಚ್ಚರಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುವಂತೆ ಠಾಣಾಧಿಕಾರಿಗೆ ಸೂಚಿಸಲಾಗಿದೆ ಎಂದು ಮಂಡಲೇಶ್ವರ ಉಪವಿಭಾಗೀಯ ಪೊಲೀಸ್ ಅಧಿಕಾರಿ ಶ್ವೇತಾ ಶುಕ್ಲಾ ತಿಳಿಸಿರುವುದಾಗಿ ವರದಿಯಾಗಿದೆ.