ರೈತ ಹೋರಾಟಗಾರರ ಬಂಧನ ವಿರೋಧಿಸಿ ಪೊಲೀಸ್ ಠಾಣೆ ಎದುರು ರಾಕೇಶ್ ಟಿಕಾಯತ್ ಧರಣಿ

0
336

ಸನ್ಮಾರ್ಗ ವಾರ್ತೆ

ಮುಝಫ್ಫರ್‌ ನಗರ: ಗಲಾಟೆ ಸಂಬಂಧ ಬಂಧಿಸಲ್ಪಟ್ಟ ರೈತ ಸಂಘಟನೆಗಳ ಹೋರಾಟಗಾರರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಪೊಲೀಸ್ ಠಾಣೆಯೆದುರು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಡೆದ ಗಲಾಟೆ ಸಂಬಂಧ ಭಾರತೀಯ ಕಿಸಾನ್ ಯೂನಿಯನ್‌ನ (ಬಿಕೆಯು) 10 ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಕೋತ್ವಾಲಿ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ತನ್ನ ಕೆಲವು ಬೆಂಬಲಿಗರೊಂದಿಗೆ ಪೊಲೀಸ್ ಠಾಣೆಯ ಎದುರು ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿದ್ದಾರೆ.

ಕೋತ್ವಾಲಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಕೈಗೊಂಡಿರುವ ಟಿಕಾಯತ್, ರೈತ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು. ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ದೂರಿದ್ದಾರೆ.

ಎರಡು ಗುಂಪುಗಳ ಜನರು ಆಸ್ಪತ್ರೆಗೆ ಬಂದಿದ್ದರು. ಒಂದು ಗುಂಪಿನ ವೈದ್ಯಕೀಯ ಪರೀಕ್ಷೆ ನಡೆಯುತ್ತಿರುವಾಗ, ಬಿಕೆಯು ಕಾರ್ಯಕರ್ತರು ಇನ್ನೊಂದು ಗುಂಪಿನ ಪರೀಕ್ಷೆಗೆ ಒತ್ತಾಯಿಸಲು ಪ್ರಾರಂಭಿಸಿದರು. ಇದು ಘರ್ಷಣೆಗೆ ಕಾರಣವಾಯಿತು ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಬಾಬುರಾಮ್ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟಿಕಾಯತ್, ಜಿಲ್ಲೆಯ ಅಧಿಕಾರಿಗಳು ನಮ್ಮ ಕಾರ್ಯಕರ್ತರನ್ನು ತಪ್ಪಾಗಿ ಪ್ರಕರಣದಲ್ಲಿ ಸಿಲುಕಿಸುವ ಮೂಲಕ ನಮ್ಮ ಸಂಘಟನೆಯನ್ನು ಹತ್ತಿಕ್ಕಲು ಬಯಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಜನರ ಜೊತೆಗಿದ್ದ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಅನಿರ್ದಿಷ್ಟಾವಧಿ ಧರಣಿಯ ಹಿನ್ನೆಲೆಯಲ್ಲಿ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸ್ಥಳದಲ್ಲಿ ಪೊಲೀಸರು ಮತ್ತು ಹೆಚ್ಚುವರಿ ಪಿಎಸಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.