ಸನ್ಮಾರ್ಗ ವಾರ್ತೆ
ಶಿವಮೊಗ್ಗ: ಪೆಟ್ರೋಲ್, ಡೀಸೆಲ್, ಎಲ್ಪಿಜಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ದಿನಾಂಕ 05-02-2021 ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನೆಗೆ ಕರೆ ನೀಡಿದೆ. ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರಿಗೆ ಹೊರೆಯಾಗುವಂತೆ ಮಾಡಿದೆ ಎಂದು ಆಕ್ರೋಶ ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಧ್ಯಕ್ಷರು ಅಡ್ವೋಕೇಟ್ ತಾಹಿರ್ ಹುಸೇನ್ ವ್ಯಕ್ತಪಡಿಸಿದರು.
ಸಬ್ಸಿಡಿ ನೆಪದಲ್ಲಿ ಗೃಹಬಳಕೆ ಸಿಲಿಂಡರ್ ದರದಲ್ಲಿ ₹100 ಏರಿಕೆ ಮಾಡಲಾಗಿದೆ. ಇದರಿಂದಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಕೊರೋನಾದಿಂದಾಗಿ ಆರ್ಥಿಕ ಬಿಕ್ಕಟ್ಟು, ಹಣದುಬ್ಬರ ಹೆಚ್ಚಳದಿಂದ ಹೈರಾಣಾಗಿರುವ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆರೋಪಿಸಿದರು.
ಪ್ರತಿ ಕುಟುಂಬಕ್ಕೆ ವರ್ಷಕ್ಕೆ 12 ಗೃಹ ಬಳಕೆ ಎಲ್ಪಿಜಿ ಸಿಲಿಂಡರ್ಗಳಿಗೆ ಸರ್ಕಾರ ನೀಡುತ್ತಿದ್ದ ಸಬ್ಸಿಡಿಯನ್ನು 6 ತಿಂಗಳಿಂದ ನಿಲ್ಲಿಸಲಾಗಿದೆ. ಇತ್ತ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ ಎಂದು ದೂರಿದರು.
ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಭಾರಿ ಏರಿಕೆಯಾಗಿದೆ. ಇದರಿಂದಾಗಿ ವಾಹನ ಸವಾರರಿಗೆ ಮತ್ತು ಲಾರಿ, ಬಸ್, ಟ್ಯಾಕ್ಸಿ ಮಾಲೀಕರಿಗೆ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಸತತವಾಗಿ ಏರಿಕೆಯಾಗುತ್ತಿರುವುದರಿಂದ ರೈತರು ಸೇರಿ ಬಡ, ಮಧ್ಯಮ ವರ್ಗದ ಜನರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿ ಹಣದುಬ್ಬರಕ್ಕೆ ಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರಕು ಸಾಗಣೆ ದರ ಹೆಚ್ಚಳದಿಂದ ವಸ್ತುಗಳ ಬೆಲೆ ಏರಿಕೆಯಾಗಿದೆ. ಕೃಷಿ ಮತ್ತು ಮಾರಾಟ ಕಾರ್ಯದಲ್ಲಿ ತೊಡಕು ಉಂಟಾಗಿ ಅರ್ಥವ್ಯವಸ್ಥೆಗೆ ಧಕ್ಕೆ ಬಂದಿದೆ. ತೈಲ, ಅಡುಗೆ ಅನಿಲ ದರ ಏರದಂತೆ ನಿಯಂತ್ರಣದಲ್ಲಿರಿಸುವುದು ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಸಾಮಾನ್ಯ ಜನರು ಪ್ರತಿಭಟನೆ ಮಾಡಲು ಸರ್ಕಾರವೇ ಅವಕಾಶ ನೀಡಿದಂತಾಗಿದೆ ಎಂದು ಟೀಕಿಸಿದರು.
ಬಿಜೆಪಿ ಸರ್ಕಾರ ಜನಸಾಮಾನ್ಯರನ್ನು ರಕ್ಷಿಸಲು ಸಂಪೂರ್ಣ ವಿಫಲವಾಗಿದೆ. ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್, ವಿದ್ಯುತ್ ದರ, ಅಗತ್ಯ ವಸ್ತುಗಳು, ಆಸ್ತಿ ತೆರಿಗೆ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಚಹಾ ಮಾರುವ ಪ್ರಧಾನಿಯಿಂದ ದೇಶದ ಅಭಿವೃದ್ಧಿಯಾಗುತ್ತದೆ ಎಂದು ತಿಳಿದ ಜನರಿಗೆ ಚಹಾ ಕುಡಿಸಿ ಮೂರ್ಖರನ್ನಾಗಿ ಮಾಡುತ್ತಿದ್ದಾರೆ.
‘ಸಬ್ಕಾ ಸಾತ್ ಸಬ್ಕಾ ವಿಕಾಸ್’ ಎಂದು ಘೋಷಣೆ ಮಾಡಿ ಬೆಲೆ ಹೆಚ್ಚಳ ಮಾಡಿ ಯಾವುದನ್ನು ವಿಕಾಸ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಒಂದು ಲೀಟರ್ ಪೆಟ್ರೋಲ್ ಮೇಲೆ 2.5 ರೂ., ಡೀಸೆಲ್ ಮೇಲೆ 4 ರೂ. ಸೆಸ್ ವಿಧಿಸುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.ಪೆಟ್ರೋಲ್ ಮತ್ತು ಡೀಸೆಲ್ಗಳು ಜಿಎಸ್ಟಿ ವ್ಯಾಪ್ತಿಯಲ್ಲಿ ಬರುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚು ಆದಾಯವನ್ನು ತರುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ವಿಧಿಸುತ್ತದೆ.
ಈಗಾಗಲೇ ರಾಜ್ಯ ಸರ್ಕಾರ ಪೆಟ್ರೊಲ್ ತೆರಿಗೆ ₹32 ಕೇಂದ್ರ ಸರ್ಕಾರ ₹30 ತೆರಿಗೆ ವಿಧಿಸುತ್ತಿದ್ದು ಇದನ್ನು ತಕ್ಷಣವೇ ಕಡಿತಗೊಳಿಸಿ ಪೆಟ್ರೊಲ್ ಮತ್ತು ಡೀಸೆಲ್ ದರವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ ಮಾಧ್ಯಮ ಕಾರ್ಯದರ್ಶಿ ಜಾಗಿರ್ದಾರ್, ಜಿಲ್ಲಾಧ್ಯಕ್ಷರಾದ ಮುಝಮ್ಮಿಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೀಶಾನ್, ಜಿಲ್ಲಾ ಉಪಾಧ್ಯಕ್ಷ ರಘುವೀರ್ ಸಿಂಗ್, ಮುಂತಾದವರು ಉಪಸ್ಥಿತರಿದ್ದರು.













