ಆಗಸ್ಟ್ 30ರಂದು ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ: ಲಕ್ಷ್ಮೀ ಹೆಬ್ಬಾಳ್ಕರ್‌

0
151

ಸನ್ಮಾರ್ಗ ವಾರ್ತೆ

ರಾಜ್ಯ ‌ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಆಗಸ್ಟ್ 30ರಂದು ಮೈಸೂರಿನಲ್ಲಿ ಚಾಲನೆ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ನಡೆದ ‘ನಮ್ಮೂರ ನಾಗಪಂಚಮಿ’ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ” ಎಂದರು.

“ಈ ಕುರಿತು ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸುವುದಾಗಿ ಹೇಳಿದ್ದಾರೆ. ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಇಂದು ಮೈಸೂರಿಗೆ ತೆರಳುತ್ತಿದ್ದೇನೆ. ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ” ಎಂದು ವಿವರಿಸಿದರು.

“ರಾಹುಲ್ ಗಾಂಧಿ ಅವರ ದಿನಾಂಕ ಹೊಂದಾಣಿಕೆ ದೃಷ್ಟಿಯಿಂದ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಿಗದಿ ಪಡಿಸಲಾಗಿದೆ” ಎಂದರು.