ಸನ್ಮಾರ್ಗ ವಾರ್ತೆ
ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದ ವಿಚಾರಣೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡ ಬ್ಲೂ ಟೂತ್ ಬಳಸಿ ತೇರ್ಗಡೆಯಾಗಿದ್ದ ಎಂಟು ಮಂದಿಯನ್ನು ಬಂಧಿಸಿದೆ.
ಹೈದರಾಬಾದ್ ಕರ್ನಾಟಕ ಕೋಟಾದಲ್ಲಿ ಪ್ರಥಮ ರ‍್ಯಾಂಕ್ ಪಡೆದಿದ್ದ ಜೇವರ್ಗಿಯ ಭಗವಂತರಾಯ ಜೋಗೂರ, ನಾಲ್ಕನೇ ರ‍್ಯಾಂಕ್ ಪಡೆದಿದ್ದ ಪ್ರಸ್ತುತ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಆಗಿರುವ ಕಲ್ಲಪ್ಪ ಸಿದ್ದಪ್ಪ ಅಲ್ಲಾಪುರ, ರವಿರಾಜ, ಪೀರಪ್ಪ ಸಿದ್ನಾಳ, ಶ್ರೀಶೈಲ ಹಚ್ಚಡ, ಹೈ–ಕ ಕೋಟಾದಲ್ಲಿ 22ನೇ ರ‍್ಯಾಂಕ್ ಪಡೆದಿದ್ದ ಅಫ್ಜಲಪುರ ತಾಲೂಕಿನ ಗೌರ (ಬಿ) ಗ್ರಾಮದ ಸಿದ್ದುಗೌಡ ಶರಣಪ್ಪ ಪಾಟೀಲ, ಸೋಮನಾಥ, ವಿಜಯಕುಮಾರ್ ಗುಡೂರ ಬಂಧಿತರು.
ಬಂಧಿತರಾದ ಎಂಟು ಜನ ಅಭ್ಯರ್ಥಿಗಳು ಕಳೆದ ಅಕ್ಟೋಬರ್ 3ರಂದು ನಡೆದ ಪರೀಕ್ಷೆಯಲ್ಲಿ ಬ್ಲೂ ಟೂತ್ ಬಳಸಿ ಪಾಸಾಗಿದ್ದರು. ಈ ಅಭ್ಯರ್ಥಿಗಳು ಬ್ಲೂಟೂತ್ ಬಳಸಿ ಪಾಸಾಗಲು ಆರ್.ಡಿ.ಪಾಟೀಲ ನೆರವಾಗಿದ್ದ ಎಂಬುದಾಗಿ ವರದಿಯಾಗಿದ್ದು, ಅಭ್ಯರ್ಥಿಗಳಿಂದ ಆರ್.ಡಿ.ಪಾಟೀಲ ಹಾಗೂ ಇತರರು ಎಷ್ಟು ಹಣ ಪಡೆದಿದ್ದಾರೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.












