ಸನ್ಮಾರ್ಗ ವಾರ್ತೆ
ಬೆಂಗಳೂರು: ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕೆಂಬ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಾಗಿದೆ. ಸೆಪ್ಟೆಂಬರ್ 8ರಂದು ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಅವರು, ವಕೀಲ ಅಂಗದ್ ಕಾಮತ್ ಮೂಲಕ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ವಿಚಾರಣೆಗಾಗಿ ಈ ಅರ್ಜಿಯನ್ನು ಇಂದು ಪ್ರಸ್ತಾಪಿಸುವ ಸಾಧ್ಯತೆಯಿದೆ.
ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನ ಮಂತ್ರಿ, ರಾಜ್ಯಪಾಲರು ಮುಂತಾದವರು ಪಾಲ್ಗೊಳ್ಳುವ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ಹಾಡಬೇಕು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಇತ್ತ ಇತರ ಸರ್ಕಾರಿ ಕಾರ್ಯಕ್ರಮಗಳಲ್ಲಿ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು.
ಕೇಂದ್ರ ಗೃಹ ಸಚಿವಾಲಯವು ಜುಲೈ 9ರಂದು ಹೊರಡಿಸಿದ ಪತ್ರದಲ್ಲಿ, ಎಲ್ಲಾ ಸಂದರ್ಭಗಳಲ್ಲೂ ಅಧಿಕೃತವಾದ ಆರು ಚರಣಗಳ ಆವೃತ್ತಿಯನ್ನೇ ಹಾಡಬೇಕು ಎಂದು ನಿರ್ದೇಶನ ನೀಡಿತ್ತು ಎಂಬುದನ್ನು ಅರ್ಜಿದಾರರು ಎತ್ತಿ ತೋರಿಸಿದ್ದಾರೆ. ಕೇಂದ್ರ ಸರ್ಕಾರವು ನಿಗದಿಪಡಿಸಿದ ಶಿಷ್ಟಾಚಾರಕ್ಕಿಂತ ಭಿನ್ನವಾದ ಸೂಚನೆಗಳನ್ನು ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದೂ ಅರ್ಜಿಯಲ್ಲಿ ತಿಳಿಸಲಾಗಿದೆ.
ಸಂವಿಧಾನದ 162ನೇ ವಿಧಿಯಡಿ ರಾಜ್ಯ ವಿಧಾನಸಭೆಯು ಕಾನೂನು ಮೂಲಕ ಮಾಡಲು ಸಾಧ್ಯವಿಲ್ಲದ್ದನ್ನು ಸರ್ಕಾರ ಮಾಡಲುಸಾಧ್ಯವಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ. ಸರ್ಕಾರದ ಈ ಆದೇಶವು ಸಂವಿಧಾನದ 256 ಮತ್ತು 257(1)ನೇ ವಿಧಿಗಳಿಗೆ ಹಾಗೂ ರಾಷ್ಟ್ರೀಯ ಗೌರವಗಳಿಗೆ ಅಪಮಾನ ತಡೆಯುವ ಕಾಯ್ದೆಗೆ 2026ರಲ್ಲಿ ಮಾಡಲಾದ ತಿದ್ದುಪಡಿಗೆ ವಿರುದ್ಧವಾಗಿದೆ ಎಂದೂ ಅರ್ಜಿಯಲ್ಲಿ ಆರೋಪಿಸಲಾಗಿದೆ.
ಸಂಪುಟದ ನಿರ್ಧಾರವನ್ನು ಕೈಗೊಂಡಿರುವ ಪ್ರಕ್ರಿಯೆಯನ್ನು ಸಹ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಸಚಿವ ಸಂಪುಟದ ಟಿಪ್ಪಣಿಯನ್ನು ತಯಾರಿಸದೆ ಮತ್ತು ಕಾನೂನು ಇಲಾಖೆಯ ಅಭಿಪ್ರಾಯವನ್ನು ಪಡೆಯದೆ ‘ಅನೌಪಚಾರಿಕ ಚರ್ಚೆಗಳ’ ಮೂಲಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಇದು 1977ರ ವ್ಯವಹಾರ ನಿರ್ವಹಣಾ ನಿಯಮಗಳಿಗೆ ವಿರುದ್ಧವಾಗಿದೆ ಮತ್ತು ಸಂವಿಧಾನದ 19(1)(ಎ) ವಿಧಿಯ ಉಲ್ಲಂಘನೆಯಾಗಿದೆ ಎಂದು ಅರ್ಜಿ ಹೇಳುತ್ತದೆ.












