ಸನ್ಮಾರ್ಗ ವಾರ್ತೆ
ಮೊಹಾಲಿ: ಪಂಜಾಬ್ನ ಲವ್ಲಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತೆ ಹಿಂಸಾಚಾರಕ್ಕೆ ತಿರುಗಿದೆ. ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿದ್ದಾರೆ. ಅನೇಕ ವಿದ್ಯಾರ್ಥಿಗಳು ಕ್ಯಾಂಪಸ್ನಲ್ಲಿ ಸಿಲುಕಿಕೊಂಡಿದ್ದಾರೆ.
ಕಾಲೇಜು ಆಡಳಿತ ಮಂಡಳಿಯು ಹತ್ತು ದಿನಗಳ ರಜೆಯನ್ನು ಘೋಷಿಸಿದೆ. ವಿದ್ಯಾರ್ಥಿಗಳು ಮನೆಗೆ ಮರಳುವಂತೆಯೂ ಸೂಚಿಸಲಾಗಿದೆ. ವಿಶ್ವವಿದ್ಯಾಲಯವು ಮುಂದಿನ ಸೂಚನೆವರೆಗೂ ಮಧ್ಯಂತರ ಪರೀಕ್ಷೆಗಳನ್ನು ಸಹ ಮುಂದೂಡಿದೆ. ಕ್ಯಾಂಪಸ್ಗೆ ಹೊರಗಿನವರು ಪ್ರವೇಶಿಸಿದ್ದಾರೆ ಎಂದು ವಿದ್ಯಾರ್ಥಿಗಳು ದೂರು ನೀಡಿದ್ದಾರೆ. ಹೊರಗಿನವರು ಹೆಣ್ಣುಮಕ್ಕಳಿಗೆ ಕಿರುಕುಳ ನೀಡಿದ್ದಾರೆ ಮತ್ತು ಗೂಂಡಾಗಳು ಕ್ಯಾಂಪಸ್ಗೆ ಪ್ರವೇಶಿಸಿದಾಗ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂಬ ಸರಣಿ ಆರೋಪಗಳ ನಂತರ ಕಾಲೇಜಿನಲ್ಲಿ ಪ್ರತಿಭಟನೆ ಪ್ರಾರಂಭವಾಯಿತು. ಶನಿವಾರ ರಾತ್ರಿ ಕ್ಯಾಂಪಸ್ನಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ, ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿಯನ್ನು ತಡೆದರು ಮತ್ತು ವಿಶ್ವವಿದ್ಯಾಲಯದ ಕಟ್ಟಡಗಳು ಹಾಗೂ ಇತರ ಸಂಸ್ಥೆಗಳಿಗೆ ಹಾನಿ ಮಾಡಿದರು. ಭಾನುವಾರ ಪೊಲೀಸರು ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದಾಗ ಪೊಲೀಸರು ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲರಾದರು. ಹಿಂಸಾಚಾರದ ನಂತರ ವಿಶ್ವವಿದ್ಯಾಲಯದ ಭದ್ರತೆಯನ್ನು ಕೇಂದ್ರ ಪಡೆಗಳು ವಹಿಸಿಕೊಂಡಿವೆ.
ಈ ಮಧ್ಯೆ, ಅತ್ಯಾಚಾರ ಮತ್ತು ಆತ್ಮಹತ್ಯೆಯ ಆರೋಪಗಳನ್ನು ವಿಶ್ವವಿದ್ಯಾಲಯದ ಅಧಿಕಾರಿಗಳು ನಿರಾಕರಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ನಕಲಿ ಅಪಪ್ರಚಾರ ಮತ್ತು ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ ಮತ್ತು ಕೆಲವು ಸಮಾಜಘಾತಕ ಶಕ್ತಿಗಳು ಕ್ಯಾಂಪಸ್ನಲ್ಲಿ ಶಾಂತಿಯುತ ವಾತಾವರಣವನ್ನು ಭಂಗಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ ವಕ್ತಾರರು ಸ್ಪಷ್ಟಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆಗಾಗಿ ಏಳು ಸದಸ್ಯರ ವಿಶೇಷ ತನಿಖಾ ತಂಡವನ್ನು ನೇಮಿಸಲಾಗಿದೆ.












