ಸನ್ಮಾರ್ಗ ವಾರ್ತೆ
ಈ ಬಾರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯದ ಜನರ ರೈತರ ನೈಜ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ಬದಲು ಅನಗತ್ಯ ವಿಷಯಗಳಲ್ಲಿ ಕಾಲಹರಣ ಮಾಡಲಾಗುತ್ತಿದೆ” ಎಂದು ವೆಲ್ಫೇರ್ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.
ಅವರು ಮಾತನಾಡುತ್ತಾ, ರಾಜ್ಯದಲ್ಲಿ ಮಳೆಯ ಅಭಾವದಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರಾಜ್ಯದ ರೈತರು ಕಂಗಲಾಗಿದ್ದಾರೆ. ಬಹಳಷ್ಟು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
ಅದರ ಜೊತೆಗೆ ಜನಪರ ಸಮಸ್ಯೆಗಳ ಅದರಲ್ಲೂ ಮುಖ್ಯವಾಗಿ ಉತ್ತರ ಕರ್ನಾಟಕ ದ ಜನರ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಚರ್ಚೆಗಳು ನಡೆಯಬೇಕಾಗಿತ್ತು. ಆದರೆ ಅವ್ಯಾವುದೂ ನಡೆಯುತ್ತಿಲ್ಲ. ವಿರೋಧ ಪಕ್ಷಗಳು ಸಣ್ಣ ಪುಟ್ಟ ಸಮಸ್ಯೆಗಳನ್ನು ಎತ್ತಿಕೊಂಡು ಕಾಲಹರಣ ಮಾಡುತ್ತಿವೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ತನ್ನ ಕರ್ತವ್ಯ ನಿಭಾಯಿಸಿ ಜನರ ಸಮಸ್ಯೆಗಳತ್ತ ಸರಕಾರದ ಗಮನ ಸೆಳೆಯುವಂತೆ ಎಚ್ಚರಿಸಬೇಕಾಗಿದೆ ಎಂದವರು ಹೇಳಿದರು.












