ಅಕ್ರಮವಾಗಿ ಬ್ಯಾಂಕ್ ಖಾತೆಗಳನ್ನು ತೆರೆದು ರಾಜ್ಯದ ಬೊಕ್ಕಸಕ್ಕೆ 269 ಕೋಟಿ ನಷ್ಟ: ಆರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ

0
183
ಸಾಮಾಜಿಕ ಕಾರ್ಯಕರ್ತ ಎಸ್. ನಾರಾಯಣಸ್ವಾಮಿ

ಸನ್ಮಾರ್ಗ ವಾರ್ತೆ

ಶ್ರೀನಿವಾಸಪುರ: ಅಕ್ರಮವಾಗಿ ಬ್ಯಾಂಕ್ ಖಾತೆಗಳನ್ನು ತೆರೆದು ರಾಜ್ಯದ ಬೊಕ್ಕಸಕ್ಕೆ 269 ಕೋಟಿ ನಷ್ಟ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಹಾಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಅಮಿತಾ ಪ್ರಸಾದ್ ಸೇರಿದಂತೆ ಒಟ್ಟು ಆರು ಜನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, ನಾಲ್ಕು ತಿಂಗಳಲ್ಲಿ ವರದಿ ಸಲ್ಲಿಸಿ ಎಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಆದೇಶಿಸಿದೆ.

ಕೋಲಾರದ ಮಾಸ್ತಿ ಲೇಔಟ್‌ನ ಸಾಮಾಜಿಕ ಕಾರ್ಯಕರ್ತ ಎಸ್ . ನಾರಾಯಣಸ್ವಾಮಿ ಸಲ್ಲಿಸಿರುವ ಖಾಸಗಿ ದೂರನ್ನು ಆಧರಿಸಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಲಕ್ಷ್ಮಿನಾರಾಯಣ ಭಟ್ ಈ ಆದೇಶ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ(ಆರ್‌ಡಿಪಿಆರ್) ಪ್ರಧಾನ ಕಾರ್ಯದರ್ಶಿಗಳಾಗಿದ್ದ ಮೂವರು ಐಎಎಸ್ ಅಧಿಕಾರಿಗಳು, ಇಲಾಖೆ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಡಾ.ಬೋರೇಗೌಡ, ಗ್ರಾಮೀಣ ನೀರು ಸರಬರಾಜು ವಿಭಾಗದ ಉಪ ಕಾರ್ಯದರ್ಶಿಯಾಗಿದ್ದ ರಾಮಕೃಷ್ಣ, ಅಂದಿನ ಸಿಂಡಿಕೇಟ್ ಬ್ಯಾಂಕ್(ಈಗ ಕೆನರಾ ಬ್ಯಾಂಕ್ ಜೊತೆ ವಿಲೀನವಾಗಿದೆ) ಮ್ಯಾನೇಜರ್ ಸೀಲಂ ಗಿರಿ ವಿರುದ್ಧ ರಾಜ್ಯ ಬೊಕ್ಕಸದ 3405.21 ಕೋಟಿ ಮೊತ್ತವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಹೊರಿಸಲಾಗಿದೆ.

‘ಎಸಿಬಿಯ ಮಹಾನಿರ್ದೇಶಕರಿಗೆ 2019 ರ ಡಿಸೆಂಬರ್ 26 ರಂದು ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಫಿರ್ಯಾದುದಾರ ನಾರಾಯಣ ಸ್ವಾಮಿ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ವಿಶೇಷ ನ್ಯಾಯಾಲಯದ(ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ದಾಖಲಾಗುವ ಪ್ರಕರಣದ ವಿಚಾರಣೆ) ನ್ಯಾಯಾಧೀಶ ಕೆ.ಲಕ್ಷ್ಮಿನಾರಾಯಣ ಭಟ್ ದೂರನ್ನು ಸಂಸ್ಥೆಯ ಅಪರಾಧ ಎಂದು ಪರಿಗಣಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ -1988ರ ಕಲಂ 13(1), 13(2) ಮತ್ತು ಭಾರತೀಯ ದಂಡ ಸಂಹಿತೆಯ ಕಲಂ 465, 467, 468 ಮತ್ತು 471ರ ಅನುಸಾರ ತನಿಖೆಗೆ ನಿರ್ದೇಶಿಸಿದ್ದಾರೆ.

ವರದಿ:ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ