ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ: SSLC ಪರೀಕ್ಷೆ ಬರೆಯುವ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ

0
610

ಸನ್ಮಾರ್ಗ ವಾರ್ತೆ

ಬೆಂಗಳೂರು: ಸರಕಾರಿ ಶಾಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಿ ಎಸೆಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2022ನೇ ಸಾಲಿನ ಎಸೆಸೆಲ್ಸಿ ಮುಖ್ಯ ಪರೀಕ್ಷೆಯು ಮಾರ್ಚ್ 28 ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ.

ಮಾ.25 ಶುಕ್ರವಾರದಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ವಿ. ಶ್ರೀನಿವಾಸಮೂರ್ತಿಯವರು ಹೊರಡಿಸಿರುವ ಸುತ್ತೋಲೆಯಲ್ಲಿ, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ಧರಿಸಲು ಸೂಚಿಸಲಾಗಿದೆ. ಖಾಸಗಿ, ಅನುದಾನಿತ ಅಥವಾ ಅನುದಾನ ರಹಿತ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಿ, ವಿದ್ಯಾರ್ಥಿಗಳು ಎಸೆಸೆಲ್ಸಿ ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗತಕ್ಕದ್ದು ಎಂದು ಹೇಳಲಾಗಿದೆ.

ಎಸೆಸೆಲ್ಸಿ ಪರೀಕ್ಷೆಯು ಮಾ. 28ರಿಂದ ಎಪ್ರಿಲ್ 11 ರವರೆಗೆ ನಡೆಯಲಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರ ಸಂಹಿತೆ ಕುರಿತು ಹೊರಡಿಸಿರುವ ಸರ್ಕಾರದ ಆದೇಶವನ್ನು ಈ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಹಿಜಾಬ್ ವಿಚಾರವಾಗಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯ ವಿಚಾರಣೆಯ ಬಳಿಕ ಮಾರ್ಚ್ 15 ರಂದು ಹೈಕೋರ್ಟ್ ತ್ರಿಸದಸ್ಯ ಪೀಠವು ಹಿಜಾಬ್ ವಿಚಾರವಾಗಿ ನೀಡಿರುವ ತೀರ್ಪಿನಲ್ಲಿ ಕೂಡ ಸರಕಾರದ ಆದೇಶವನ್ನು ಸಿಂಧುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅದನ್ನು ಪಾಲಿಸಲು ಶಿಕ್ಷಣ ಇಲಾಖೆಯ ಸುತ್ತೋಲೆಯಲ್ಲಿ ಹೇಳಲಾಗಿದೆ.

ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. 11 ದಿನಗಳ ವಿಚಾರಣೆಯ ಬಳಿಕ ಮಾ.15ರಂದು ಕರ್ನಾಟಕ ಹೈಕೋರ್ಟಿನ ತ್ರಿಸದಸ್ಯ ಪೀಠವು ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗವಲ್ಲ. ಆದ್ದರಿಂದ ಶಾಲಾ-ಕಾಲೇಜುಗಳಲ್ಲಿ ಸರಕಾರ ನೀಡಿರುವ ಆದೇಶವನ್ನು ವಿದ್ಯಾರ್ಥಿಗಳು ಪಾಲಿಸುವಂತೆ ತೀರ್ಪು ನೀಡಿತ್ತು.