ವಿದ್ಯುತ್ ದರ ಏರಿಕೆ: ರಾಜ್ಯ ಸರ್ಕಾರದ ನಡೆಗೆ ವೆಲ್ಫೇರ್ ಪಾರ್ಟಿ ಆಕ್ರೋಶ

0
450

ಸನ್ಮಾರ್ಗ ವಾರ್ತೆ

ಬೆಂಗಳೂರು: ರಾಜ್ಯದ ಎಲ್ಲಾ ವಿದ್ಯುತ್ ಕಂಪೆನಿಗಳ ವಿದ್ಯುತ್ ದರವನ್ನು ಪ್ರತಿ ಯುನಿಟ್‌ಗೆ 40 ಪೈಸೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದ ಕೋವಿಡ್‌ ಸಂಕಷ್ಟದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದಿದ್ದಾರೆ.

ಕೊರೊನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ಪ್ರತಿ ಯೂನಿಟ್‌ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ ಖಾನ್ ಆಗ್ರಹಿಸಿದ್ದಾರೆ.